ನವದೆಹಲಿ:ನೀಟ್ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿದ್ದಾರೆಂಬ ಆರೋಪ ಇದೀಗ ರಾಜಕೀಯ ಸಂಘರ್ಷಕ್ಕೆ ತಿರುಗಿದೆ.ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ದೆಹಲಿಯ ಪಾರ್ಲಿಮೆಂಟ್ ಸ್ಪೀಟ್ ಪೊಲೀಸ್ ಠಾಣೆಗೆ ತೆರಳಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು.ಈ ವೇಳೆ ಪ್ರತಿಭಟನಾ ಮೆರವಣಿಗೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾಹಿಲ್ ಲೋಚಬ್ ಕೂಡ ರಾಹುಲ್ ಗಾಂಧಿ ಅವರೊಂದಿಗೆ ತೆರಳಿದ್ದರು ಎಂದು ತಿಳಿದುಬಂದಿದೆ.ಜುಲೈ ೨೦ರಂದು ನೀಟ್ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ
ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿ, ಎಫ್‌ಐಆರ್ ದಾಖಲಿಸುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು ರಾಹುಲ್ ಗಾಂಧಿ ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ತೆರಳಿ, ಪ್ರತಿಭಟನಾಕಾರರ ವಿರುದ್ಧ ನಡೆದ ಪೊಲೀಸ್ ಕ್ರಮ ಹಾಗೂ ಪೆಲೆಟ್ ಗನ್ ಬಳಕೆಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದರು. ಆದರೆ, ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಬಳಿಕ ರಾಹುಲ್ ಗಾಂಧಿ ಕೇಂದ್ರ ವಿಭಾಗದ ಡಿಸಿಪಿಯನ್ನು ಭೇಟಿಯಾದರು.
ನಂತರ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ತಮ್ಮ ದೂರು ಅಧಿಕೃತವಾಗಿ ಸ್ವೀಕರಿಸಿ ಪ್ರಕರಣ ದಾಖಲಿಸುವವರೆಗೂ ಪೊಲೀಸ್ ಠಾಣೆಯಲ್ಲೇ ಉಳಿದು ಒತ್ತಾಯ ಮುಂದುವರಿಸುವುದಾಗಿ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಜುಲೈ ೨೦ರಂದು ನಡೆದ 'ಸಂಸತ್ ಚಲೋ' ಮೆರವಣಿಗೆಯ ಸಂದರ್ಭದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.ಪ್ರತಿಭಟನೆಯ ನಂತರ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಆರೋಪ ಮಾಡಲಾಗಿದೆಆದರೆ, ದೆಹಲಿ ಪೊಲೀಸರು ಪೆಲೆಟ್ ಗನ್ ಬಳಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮಾತ್ರ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಗಳು ತಿಳಿಸಿವೆ.
Santhoshvani digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್


0 ಕಾಮೆಂಟ್‌ಗಳು