(santhoshvani.com)
ಬೆಂಗಳೂರು: ಸರ್ಕಾರದ ಮೇಲೆ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರ ನಿರಂತರ ರಾಜೀನಾಮೆ ಎಚ್ಚರಿಕೆ ಹಾಗೂ ಒತ್ತಡಕ್ಕೆ ಮಣಿದಿರುವ ಕರ್ನಾಟಕ ರಾಜ್ಯ ಸರ್ಕಾರವು ಕೊನೆಗೂ ಗದಗ ಜಿಲ್ಲೆಯ ಮೂರು ತಾಲೂಕುಗಳನ್ನು ಬರ ಪಟ್ಟಿಗೆ ಸೇರ್ಪಡೆ ಮಾಡಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಒಟ್ಟು ಸಂಖ್ಯೆ 188ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 22ರಂದು ವರದಿಯಾದಂತೆ, ಸೆಪ್ಟೆಂಬರ್ 20ರಂದು ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದ ರೈತರ ಹೋರಾಟದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಶಾಸಕ ಹೆಚ್.ಕೆ. ಪಾಟೀಲ್, ಬರ ಘೋಷಣೆ ಸಂಬಂಧ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
ಅಕ್ಟೋಬರ್ 10ರವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡುತ್ತಿದ್ದು, ಅಷ್ಟರೊಳಗೆ ಬರಪೀಡಿತ ತಾಲೂಕು ಎಂದು ಗದಗವನ್ನು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಎಚ್ಚರಿಸಿದ್ದರು. ಶಾಸಕರ ಈ ತೀವ್ರ ಎಚ್ಚರಿಕೆಯ ಬೆನ್ನಲ್ಲೇ ಎಚ್ಚೆತ್ತ ಸರ್ಕಾರವು ಗದಗ, ಮುಂಡರಗಿ ಹಾಗೂ ರೋಣ ತಾಲೂಕುಗಳನ್ನು ಸಾಮಾನ್ಯ ಬರ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಸರ್ಕಾರದ ಈ ನಿರ್ಧಾರದಿಂದ ಗದಗ ಜಿಲ್ಲೆಯ ಅನ್ನದಾತರು ನಿಟ್ಟುಸಿರು ಬಿಟ್ಟಿದ್ದಾರೆ.
ಕೇಂದ್ರ ಸರ್ಕಾರವು 2020ರಲ್ಲಿ ರೂಪಿಸಿರುವ ಬರ ಘೋಷಣೆಯ ಮಾರ್ಗಸೂಚಿಗಳ ಪ್ರಕಾರವೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕಾಗುತ್ತದೆ. ಆ ಮಾನದಂಡಗಳನ್ನು ಅನುಸರಿಸಿ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ನಿರಂತರ ಪರಿಶೀಲನೆಯ ಬಳಿಕ ಮತ್ತಷ್ಟು ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಇದೀಗ ಮತ್ತೆ 53 ತಾಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಇದರೊಂದಿಗೆ ಒಟ್ಟು 188 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಿವೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಪೈಕಿ ಕನಕಪುರ ತಾಲೂಕು 'ತೀವ್ರ ಸ್ವರೂಪದ' ಬರದ ಪಟ್ಟಿಗೆ ಸೇರ್ಪಡೆಗೊಂಡಿದೆ.
Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು