(Santhoshvani.com)
ಹುಕ್ಕೇರಿ: ರಾಜ್ಯದಲ್ಲಿ ಭೀಕರ ಬರ ಆವರಿಸಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುವುದನ್ನು ಬಿಟ್ಟು, ರಾಜ್ಯ ಸರ್ಕಾರವೇ ಕೂಡಲೇ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಆಗ್ರಹಿಸಿದ್ದಾರೆ.
ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಜಗದೀಶ ಶೆಟ್ಟರ್ ಅವರ ಆಡಳಿತಾವಧಿಯಲ್ಲಿ ಸಾಲಮನ್ನಾ ಘೋಷಿಸಿದ ಸಂದರ್ಭಗಳಲ್ಲಿಯೂ ರಾಜ್ಯ ಸರ್ಕಾರಗಳು ತಮ್ಮದೇ ಆದ ಸಂಪನ್ಮೂಲಗಳ ಮೂಲಕ ಆ ತೀರ್ಮಾನ ಕೈಗೊಂಡಿದ್ದವು ಎಂದು ಸ್ಮರಿಸಿದರು. ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗ ಕೇಂದ್ರದ ನೆರವು ಕೇಳದ ಸರ್ಕಾರ, ರೈತರ ಸಾಲಮನ್ನಾ ವಿಚಾರದಲ್ಲಿ ಮಾತ್ರ ಕೇಂದ್ರದತ್ತ ಬೊಟ್ಟು ಮಾಡುವುದು ಸರಿಯಲ್ಲ ಎಂದು ತೀವ್ರವಾಗಿ ಟೀಕಿಸಿದರು.
ರಾಜ್ಯದಲ್ಲಿ ಉಂಟಾಗಿರುವ ತೀವ್ರ ವಿದ್ಯುತ್ ಕಡಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಆತಂಕ ವ್ಯಕ್ತಪಡಿಸಿದ ರಮೇಶ ಕತ್ತಿ ಬೆಂಗಳೂರಿನ ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತು ಆಡಳಿತ ನಡೆಸುವವರಿಗೆ ಗ್ರಾಮೀಣ ಜನರ ನೈಜ ಕಷ್ಟಗಳು ಅರಿಯುವುದಿಲ್ಲ ಎಂದರು. ಮುಖ್ಯಮಂತ್ರಿ ಹಾಗೂ ಸಚಿವರು ಒಂದೆ ದಿನ ಗ್ರಾಮೀಣ ಭಾಗದ ರೈತರ ಮನೆಗಳಲ್ಲಿ ವಾಸ್ತವ್ಯ ಹೂಡಿ ಜನರ ಕಷ್ಟಗಳನ್ನು ಕಣ್ಣಾರೆ ಕಂಡು ಅನುಭವಿಸಬೇಕು ಎಂದು ಸವಾಲು ಹಾಕಿದರು.
ರೈತರು ಬೆಳೆಗಳಿಗೆ ನೀರು ಹಾಯಿಸಲು ವಿದ್ಯುತ್ ಇಲ್ಲದೆ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವೆ. ಸರ್ಕಾರದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮುಂದಿನ ಒಂದು ವಾರದೊಳಗೆ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಪೂರೈಸದಿದ್ದರೆ ರೈತರು ಬೀದಿಗಿಳಿದು ಪ್ರತಿಭಟಿಸುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು ರಾಜ್ಯದ ಭವಿಷ್ಯದ ದೃಷ್ಟಿಯಿಂದ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿ ಸೂಕ್ತ ಪೂರ್ವಭಾವಿ ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು