(Santhoshvani.com)
ಖಾನಾಪುರ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ತ್ವರಿತವಾಗಿ ಪರಿಹಾರ ಕದಗಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯ ಪ್ರಜಾಸೇವಾ ಆಂದೋಲನವನ್ನು ಹಮ್ಮಿಕೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಖಾನಾಪುರದ ಲೋಕಮಾನ್ಯ ಟಿಳಕ ಭವನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಜನರ ಕುಂದುಕೊರತೆಗಳಿಗೆ ಸ್ಪಂದಿಸುವಾಗ ಅಧಿಕಾರಿಗಳು ಯಾವುದೇ ವಿಳಂಬ ಧೋರಣೆ ಅನುಸರಿಸದೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತರಲು ಉತ್ತಮ ಅವಕಾಶ ದೊರೆತಿದೆ ಎಂದರು.
ಅರ್ಜಿಗಳ ವಿಲೇವಾರಿ ಹಾಗೂ ಜಿಲ್ಲಾಧಿಕಾರಿಗಳ ಮಾಹಿತಿ:
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸ್ಮಶಾನ ಭೂಮಿ ಮಂಜೂರು, ಕಂದಾಯ ಇಲಾಖೆ ಹಾಗೂ ಶಾಲಾ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ನೂರಾರು ಅರ್ಜಿಗಳು ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾಗಿವೆ ಎಂದು ತಿಳಿಸಿದರು. ಬಂದಿರುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ, ನಿಯಮಾನುಸಾರ ಶೀಘ್ರವಾಗಿ ವಿಲೇವಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಈ ಹಿಂದೆ ಯರಗಟ್ಟಿಯಲ್ಲಿ ನಡೆದ ಆಂದೋಲನದಲ್ಲೂ ನೂರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಈಗಾಗಲೇ ಗಣನೀಯ ಪ್ರಮಾಣದ ಅರ್ಜಿಗಳನ್ನು ಬಗೆಹರಿಸಲಾಗಿದೆ ಎಂದು ವಿವರಿಸಿದರು. ಖಾನಾಪುರ ತಾಲ್ಲೂಕಿನ ನಾನಾ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಈ ಸಭೆಯ ಪ್ರಯೋಜನ ಪಡೆದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಿದರು.
ಈ ಬೃಹತ್ ಜನಸ್ಪಂದನ ಸಭೆಯಲ್ಲಿ ಶಾಸಕ ವಿಠ್ಠಲ ಹಲಗೇಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು